ಚಿಕ್ಕಮಗಳೂರು: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಸೆ. ೧೫ ರಂದು ಆಚರಿಸಲಾಗುವುದೆಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದರು.
ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಅಂದು ಬೀದರ್‌ನಿಂದ ಚಾಮರಾಜನಗರದವರೆಗೆ ಏಕಕಾಲದಲ್ಲಿ ಮಾನವ ಸರಪಳಿ ರಚಿಸಿ ಸಂವಿಧಾನದ ಪೀಠಿಕೆಯನ್ನು ಬೋಧಿಸುವ ಮೂಲಕ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಮಾಗಡಿ ಕೈಮರದಿಂದ ಚಿಕ್ಕಮಗಳೂರು, ಕಡೂರು, ಅಜ್ಜಂಪುರ, ಹಾಗೂ ತರೀಕೆರೆ ಮಾರ್ಗವಾಗಿ ಜಿಲ್ಲೆಯ ಗಡಿ ಭಾಗವಾದ ಎಂ.ಸಿ ಹಳ್ಳಿವರೆಗೆ ನಾಲ್ಕು ತಾಲ್ಲೂಕುಗಳ ರಾಜ್ಯ ಹೆದ್ದಾರಿಯಲ್ಲಿ ಮಾನವ ಸರಪಳಿಯನ್ನು ರಚಿಸಲಾಗುತ್ತದೆ ಎಂದರು .
ಸಂವಿಧಾನದ ಮಹತ್ವ ಸಾರುವ ಜಾಗೃತಿ ಕಾರ್ಯಕ್ರಮದಲ್ಲಿ ಎಲ್ಲಾ ಅಧಿಕಾರಿಗಳು ಸಂಘ, ಸಂಸ್ಥೆಗಳ ಮುಖಂಡರು, ಶಾಲಾ-ಕಾಲೇಜು, ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂ ಪ್ರೇರಿತವಾಗಿ ಭಾಗವಹಿಸಿ ಪ್ರಜಾಪ್ರಭುತ್ವದ ದಿನವನ್ನು ಹಬ್ಬವಾಗಿ ಆಚರಿಸಲು ಪ್ರತಿಯೊಬ್ಬರು ಕೈಜೋಡಿಸಬೇಕು ಎಂದರು.